ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೃತಕ ಬುದ್ಧಿಮತ್ತೆ ಬಗ್ಗೆ ಕಾರ್ಯಗಾರವನ್ನು ನಡೆಸಲಾಯಿತು.
ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ಅವರು ಕಾರ್ಯಗಾರವನ್ನು ಉದ್ಘಾಟಿಸಿ ಕೃತಕ ಬುದ್ಧಿಮತ್ತೆ ಮತ್ತು ಮಾಹಿತಿ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳುವುದರಿಂದ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸುಲಭವಾಗುತ್ತದೆ ಮತ್ತು ಔದ್ಯೋಗಿಕ ನೆಲೆಯಲ್ಲಿಯೂ ಇದು ಬಹಳಷ್ಟು ಪ್ರಯೋಜನಕಾರಿಯಾಗಲಿದೆ ಎಂದು ನುಡಿದರು.
ಹಾಶೆಡೈನ್ ಬೈ ಡಿಲೈಟ್ ಕಂಪನಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷಣ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು ನೀಡಿದರು. ಆಧುನಿಕವಾಗಿ ಮುಂದುವರಿಯುತ್ತಿರುವ ಜಗತ್ತಿನಲ್ಲಿ ತಂತ್ರಜ್ಞಾನದಲ್ಲಿ ಆಧುನಿಕ ಆವಿಷ್ಕಾರಗಳು ನಡೆಯುತ್ತಿದ್ದು ನಾವು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನವು ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು ಬೇರೆ ಬೇರೆ ಕ್ಷೇತ್ರಗಳಲ್ಲಿ ಸುಲಭವಾಗಿ ಮತ್ತು ಅತಿ ಶೀಘ್ರವಾಗಿ ಕಾರ್ಯನಿರ್ವಹಿಸಲು ಸಹಾಯಕಾರಿಯಾಗಿದೆ. ಈಗಿನ ಕಂಪ್ಯೂಟರ್ ಯುಗದಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದ್ದು ಪ್ರತಿಯೊಬ್ಬರಿಗೂ ಅನುಕೂಲಕರವಾಗಲಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಏಲಿಯಸ್.ಎಂ.ಕೆ, ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಪ್ರಜ್ವಲ್ ಕೆ.ಪಿ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಭಾಗವಹಿಸಿದರು.