ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.
ಈ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಕಣ್ಣಿಟ್ಟಿದ್ದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಬಿಜೆಪಿಯ ಸತೀಶ್ ಕುಂಪಲ ಮುಂತಾದವರು ಟಿಕೆಟ್ ಅಕಾಂಕ್ಷಿಗಳಾಗಿದ್ದರು ಆದರೆ ಇದೀಗ ಬಿಜೆಪಿಯು ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.