

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಆರಂಭವಾದ ಸಾಧಾರಣ ಮಳೆ ನಿರಂತರವಾಗಿ ಮುಂದುವರಿದಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ನವೆಂಬರ್ ಮೊದಲ ವಾರದವರೆಗೂ ಇದರ ಪ್ರಭಾವ ಇರಲಿದೆ.
ಕರಾವಳಿಗೆ ಇನ್ನೂ 2 ದಿನ ಭರ್ಜರಿ ಮಳೆಯ ಆರೆಂಜ್ ಅಲರ್ಟ್ : ಉಳಿದೆಡೆ ಶುಕ್ರವಾರದಿಂದ ತಗ್ಗಲಿದೆ ಮಳೆ. ಜಿಲ್ಲೆಯ ಗ್ರಾಮೀಣ ಭಾಗಗಳಾದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಮತ್ತು ಸುರತ್ಕಲ್‌ಗಳಲ್ಲಿ ಮಧ್ಯಾಹ್ನದ ನಂತರ ಮಳೆಯ ಅಬ್ಬರ ಹೆಚ್ಚಾಗಿತ್ತು. ಇದರಿಂದಾಗಿ ಕೆಲವು ಕಡೆಗಳಲ್ಲಿ ಕೃಷಿ ಹಾಗೂ ತೋಟಗಳಿಗೆ ಹಾನಿಯಾಗಿದ್ದರೆ, ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ, ಮೀನುಗಾರರಿಗೆ ಎಚ್ಚರಿಕೆ
ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಅಕ್ಟೋಬರ್ 26ರ ವರೆಗೆ ಪ್ರವಾಸಿಗರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.






