

ಕಡಬ: ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸಲು “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)” ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಅ.1ರಿಂದ ಜಾರಿಗೊಳಿಸುವಂತೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಸೇರಿ ಅಂದಾಜು 25 ಲಕ್ಷ ಫಲಾನುಭವಿಗಳು ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿದ್ದಾರೆ. ಸರ್ಕಾರ ಈ ಯೋಜನೆಗಾಗಿ ವಾರ್ಷಿಕ ರೂ. 500 ಕೋಟಿ ಅನುದಾನವನ್ನು ಮೀಸಲಿಟ್ಟಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರಿ ನೌಕರರು ಅಕ್ಟೋಬರ್-2025ರಿಂದ ಪ್ರತಿ ತಿಂಗಳು ಸರ್ಕಾರ ನಿಗದಿಪಡಿಸಿದ ವಂತಿಗೆಯನ್ನು ನೀಡಬೇಕಾಗಿದೆ. ಪತಿ-ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವಂತಿಗೆಯನ್ನು ನೀಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಯೋಜನೆಗೆ ಸೇರದಿರಲು ಬಯಸುವ ನೌಕರರು ದಿನಾಂಕ: 18-10-2025ರೊಳಗೆ ತಮ್ಮ ಸಂಬಂಧಿಸಿದ ಬಟವಾಡೆ ಅಧಿಕಾರಿಗಳಿಗೆ (DDO) ಲಿಖಿತವಾಗಿ ಅರ್ಜಿ ಸಲ್ಲಿಸಬೇಕಾಗಿದೆ.
ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದರೆ, ಅವರ ಮಾಸಿಕ ಆದಾಯ ಮಿತಿ ರೂ. 17,000ರಿಂದ ರೂ. 27,000ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ವಿವಾಹಿತ ಸರ್ಕಾರಿ ಮಹಿಳಾ ನೌಕರರ ತಂದೆ-ತಾಯಂದಿರೂ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನಿರ್ವಹಿಸಲಿದೆ. ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಮಹತ್ವದ ಈ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಕಡಬದ ಅಧ್ಯಕ್ಷ ವಿಮಲ್ ನೆಲ್ಯಾಡಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






