ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 52ನೇ ಕನ್ನಡ ರಾಜ್ಯೋತ್ಸವವನ್ನು ಶನಿವಾರ ಭಾವಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಕನ್ನಡ ತಾಯಿಯೆಂದೇ ಆರಾಧಿಸಲ್ಪಡುವ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಕನ್ನಡ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಎಂ.ವೈ.ತೋಮಸ್ ಅವರು, ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವವು ಕರ್ನಾಟಕದ ಸ್ಥಾಪನೆಯ ದಿನವಾಗಿದೆ. 1956ರ ನವೆಂಬರ್ 1ರಂದು ಮೈಸೂರು ರಾಜ್ಯ (ಇಂದಿನ ಕರ್ನಾಟಕ) ಕನ್ನಡ ಮಾತನಾಡುವ ಎಲ್ಲ ಪ್ರದೇಶಗಳನ್ನು ಒಗ್ಗೂಡಿಸಿ ರಚಿಸಲಾಯಿತು. ಈ ಹಬ್ಬದ ಉದ್ದೇಶ ಕರ್ನಾಟಕದ ಏಕೀಕರಣ ಚಳುವಳಿಯನ್ನು ಸ್ಮರಿಸುವುದು, ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಗೌರವ ಸಲ್ಲಿಸುವುದು ಮತ್ತು ನಾಡಿನ ಸಾಧಕರನ್ನು ಸನ್ಮಾನಿಸುವುದಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದಿಂದಲೇ ನಡೆದ ಕರ್ನಾಟಕ ಏಕೀಕರಣ ಚಳುವಳಿಯ ಫಲವಾಗಿ ರಾಜ್ಯಗಳ ಮರುಸಂಘಟನೆ ಕಾಯ್ದೆಯಡಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂತು. ಮುಂಬೈ, ಮದ್ರಾಸ್ ಹಾಗೂ ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಡಿದ್ದ ಕನ್ನಡನಾಡಿನ ಭಾಗಗಳನ್ನು ಒಗ್ಗೂಡಿಸಲಾಯಿತು. ಬಳಿಕ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ನೇತೃತ್ವದಲ್ಲಿ ಮೈಸೂರು ರಾಜ್ಯವನ್ನು ಅಧಿಕೃತವಾಗಿ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಫಾ.ನೋಮಿಸ್ ಕುರಿಯಾಕೋಸ್, ಪ್ರಾಚಾರ್ಯ ಏಲಿಯಾಸ್ ಎಂ.ಕೆ., ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಹರಿಪ್ರಸಾದ್, ನಿವೃತ್ತ ದೈಹಿಕ ಶಿಕ್ಷಕ ಉಲ್ಲಹನನ್, ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾಚಾರ್ಯ ಏಲಿಯಾಸ್ ಎಂ.ಕೆ. ಸ್ವಾಗತಿಸಿದರು. ಮುಖ್ಯಶಿಕ್ಷಕ ಹರಿಪ್ರಸಾದ್ ವಂದಿಸಿದರು.

  •  

Leave a Reply

error: Content is protected !!