

ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ ಕಡಬ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಭಾಗಗಳಲ್ಲಿ ಕಾಡಾನೆ, ಕಾಡುಹಂದಿ ಸೇರಿದಂತೆ ಇತರ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮೀಣ ಪ್ರದೇಶದ ಜನಸಾಮಾನ್ಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತೋಟ, ಕೃಷಿ ಭೂಮಿ ಹಾಗೂ ಮನೆ ಸಮೀಪಕ್ಕೂ ಕಾಡುಪ್ರಾಣಿಗಳು ನುಗ್ಗುತ್ತಿರುವುದರಿಂದ ರೈತರು ಹಾಗೂ ಮಹಿಳೆಯರು ದಿನನಿತ್ಯದ ಕೆಲಸಕ್ಕೂ ಆತಂಕದಿಂದ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡುಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರ ಪ್ರಾಣಾಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅರಣ್ಯ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು, ಅಗತ್ಯ ಭದ್ರತಾ ಕ್ರಮಗಳೊಂದಿಗೆ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಯೋಜನೆ ಜಾರಿಗೆ ತರಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.






