


ನೆಲ್ಯಾಡಿ :ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಪಟ್ಟೆ ನಿವಾಸಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಪಟ್ಟೆ (67) ಅವರು ಜ.14ರಂದು ಮುಂಜಾನೆ ನಿಧನರಾದರು.
ಕಳೆದ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಶೆಟ್ಟಿ ಅವರಿಗೆ ಕಳೆದ ರಾತ್ರಿ ಏಕಾಏಕಿ ಆರೋಗ್ಯದಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಅವರನ್ನು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 1 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಉಮೇಶ್ ಶೆಟ್ಟಿ ಪಟ್ಟೆ ಅವರು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿರಂತರವಾಗಿ ಸುಮಾರು 30 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಂಘದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಅವರ ಅವಧಿಯಲ್ಲಿ ಸಂಘವು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಆರ್ಥಿಕವಾಗಿ ಸದೃಢವಾಗಲು ಕಾರಣವಾಯಿತು. ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ನೆಲ್ಯಾಡಿ ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾಗಿಯೂ, ಪಡುಬೆಟ್ಟು ಸರಕಾರಿ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಹಲವು ಸಾಮಾಜಿಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.
ಮಧ್ಯಾಹ್ನ ಅಂತ್ಯ ಸಂಸ್ಕಾರ :
ಮೃತ ಉಮೇಶ್ ಶೆಟ್ಟಿ ಪಟ್ಟೆಯವರ ಅಂತ್ಯಕ್ರಿಯೆ ಇಂದು (ಜ.14) ಮಧ್ಯಾಹ್ನ 1 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಂಘಕ್ಕೆ ರಜೆ :
ಮೃತರ ಗೌರವಾರ್ಥ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.14ರಂದು ರಜೆ ಘೋಷಿಸಲಾಗಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಅವರು ತಿಳಿಸಿದ್ದಾರೆ.






