



ನೆಲ್ಯಾಡಿ: ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಕೌಕ್ರಾಡಿ ಗ್ರಾಮ ಪಂಚಾಯತ್ ಕಚೇರಿ ಸಮೀಪ ಇರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮಂಜೂರಾದ ಜಾಗವನ್ನು ಫೆ.2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಕೌಕ್ರಾಡಿ ಗ್ರಾಮದ ಸರ್ವೇ ನಂ.201/1ಎ1ಎಯಲ್ಲಿ ಅಂದಾಜು 1 ಎಕರೆ ಸರಕಾರಿ ಜಾಗವನ್ನು 2002ರಲ್ಲಿ ಕೆಎಸ್‌ಆರ್‌ಟಿಸಿಗೆ ಬಸ್ ನಿಲ್ದಾಣ ನಿರ್ಮಾಣ ಉದ್ದೇಶದಿಂದ ಮಂಜೂರು ಮಾಡಲಾಗಿತ್ತು. ಪ್ರಸ್ತುತ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ನಿಲ್ದಾಣದ ಸುಧಾರಣೆ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಾದ ಗಡಿ ಗುರುತನ್ನು ನವೀಕರಿಸಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ಹಾಗು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷೆ ಉಷಾ ಅಂಚನ್ ಅವರು ಇತ್ತೀಚಿನ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ, ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ಭೇಟಿ ನೀಡಿ ಜಾಗದ ನಿಖರ ಗಡಿ ಹಾಗೂ ದಾಖಲೆಗಳನ್ನು ಪರಿಶೀಲಿಸಿತು. ಪರಿಶೀಲನೆ ವೇಳೆ ಕಡಬ ತಾಲೂಕು ಸರ್ವೇಯರ್ ಗಿರಿ ಗೌಡ ಮಾತನಾಡಿ, “ಸರ್ವೆ ನಂ.201/1ಎ1ಎಯಲ್ಲಿ ಕೆಎಸ್‌ಆರ್‌ಟಿಸಿಗೆ ಒಟ್ಟು 0.96 ಸೆಂಟ್ಸ್ ಜಾಗ ಮಂಜೂರು ಆಗಿದೆ. ಇದರ ಭಾಗವಾಗಿ ಸಾರ್ವಜನಿಕ ರಸ್ತೆ ಕೂಡ ಹಾದು ಹೋಗುತ್ತದೆ” ಎಂದು ತಿಳಿಸಿದರು.
ಪರಿಶೀಲನಾ ವೇಳೆ ಕೆಎಸ್‌ಆರ್‌ಟಿಸಿ ಪುತ್ತೂರು ಡಿಪೋ ಮೇನೇಜರ್ ಸುಬ್ರಹ್ಮಣ್ಯ ಪ್ರಕಾಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಶರತ್, ತಾ.ಪಂ. ಸಹಾಯಕ ನಿರ್ದೇಶಕ ಯಶವಂತ ಬೆಳ್ಚಡ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿ ಸದಸ್ಯ ಪಿ.ಪಿ. ವರ್ಗೀಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಗಂಗಾಧರ ಶೆಟ್ಟಿ ಹೊಸಮನೆ, ಸತೀಶ್ ಪಳಿಕೆ, ಭವಾನಿಶಂಕರ ಗೌಡ, ಮಾಧವ ಪೂಜಾರಿ, ಬಶೀರ್ ಆತೂರು, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಉದಯಕುಮಾರ್, ಸದಸ್ಯರು ಕೆ.ಎಂ. ಹನೀಫ್, ಲೋಕೇಶ್ ಬಾಣಜಾಲು, ನೆಲ್ಯಾಡಿ -ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್ ದುರ್ಗಶ್ರೀ, ನಿವೃತ್ತ ಮುಖ್ಯಶಿಕ್ಷಕ ರವೀಂದ್ರ.ಟಿ, ಕೆ ಎನ್ ಆರ್ ಕಂಪನಿಯ ರಂಗಸ್ವಾಮಿ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.





