





ಉಪ್ಪಿನಂಗಡಿ: ತಾಲೂಕಿನ ಕಲ್ಲೇರಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ (60) ಅವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಕಡೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ, ಎದುರುಗಡೆಯಿಂದ ವೇಣೂರು ಮೂಲದ ಶಿವಪ್ರಸಾದ್ ಚಾಲನೆ ಮಾಡುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಸುಹೈರಾ ಗಂಭೀರವಾಗಿ ಗಾಯಗೊಂಡಿದ್ದು, ಸಾಜಿರಾ ಹಾಗೂ ಇಸ್ಮಾಯಿಲ್ ಅವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಹೈರಾ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.





