ಕಾಸರಗೋಡು ಮೂಲದ ಮೂವರು ಯುವಕರು ಪೊಲೀಸ್ ವಶಕ್ಕೆ; ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ







ಬೆಳ್ತಂಗಡಿ: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಜಲಪಾತ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಮೇ 20ರಂದು ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಲೀಂ (18) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:60/2026ರಂತೆ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಆರೋಪಿತ ಯುವಕರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಲಪಾತಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಆರೋಪಿತರು ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿತರ ವರ್ತನೆಗೆ ಯುವತಿಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಯುವಕರನ್ನು ತಡೆದಿದ್ದಾರೆ. ಬಳಿಕ ಘಟನೆ ಕುರಿತು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿತರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಸಂತ್ರಸ್ತ ಯುವತಿಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಮೇ 20ರ ರಾತ್ರಿ ಬಂಧಿಸಿದ್ದು, ಮೇ 21ರಂದು ಸಂಜೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿಜೇಯೇಂದ್ರ ಟಿ. ಹೆಚ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದೇ ವೇಳೆ ನೊಂದ ಮೂವರು ಯುವತಿಯರನ್ನು ಮೇ 21ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿ ಮಧ್ಯಾಹ್ನದಿಂದ ಸಂಜೆಯವರೆಗೆ ಬಿಎನ್‌ಎಸ್ 183ರಡಿ ಹೇಳಿಕೆ ದಾಖಲಿಸಲಾಗಿದೆ.
ಘಟನೆ ಬೆನ್ನಲ್ಲೇ ತಾಲೂಕಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರವಾಸಿ ತಾಣಗಳ ಸುತ್ತಮುತ್ತ ಯಾವುದೇ ಪರವಾನಗಿ ಇಲ್ಲದೆ ಕೆಲ ಹೋಂ ಸ್ಟೇಗಳು ಕಾರ್ಯಾಚರಿಸುತ್ತಿದ್ದು, ಇಂತಹ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸಿಗುತ್ತಿರುವ ಆರೋಪ ಕೇಳಿಬರುತ್ತಿದೆ.
ತಕ್ಷಣ ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಅನಧಿಕೃತ ಹೋಂ ಸ್ಟೇಗಳ ಮೇಲೆ ದಾಳಿ ನಡೆಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


