ವಿಶ್ವ ತಂಬಾಕು ವಿರೋಧಿ ದಿನಾಚರಣೆ: ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕು ಕಟ್ಟಿಕೊಳ್ಳಿ

ಶೇರ್ ಮಾಡಿ

ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಗಾರ

 

ವಿಶ್ವ ತಂಬಾಕು ವಿರೋಧಿ ದಿನಾಚರಣೆ: ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕು ಕಟ್ಟಿಕೊಳ್ಳಿ

ಆಲಂಕಾರು: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ಹಾಗೂ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ಸಹಯೋಗದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಗಾರವನ್ನು ಗುರುವಾರ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕಿನ ನಿಕಟ ಪೂರ್ವ ಅಧ್ಯಕ್ಷ ಮಹೇಶ್ ಕೆ. ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಆರೋಗ್ಯಕರ ಹಾಗೂ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ದಯಾನಂದ ರೈ ಮನವಳಿಕೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ. ಸರಿಯಾದ ಸಮಯದಲ್ಲಿ ಜಾಗೃತಿ ಮೂಡಿಸಿದರೆ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ ಮಾತನಾಡಿ, ಮಕ್ಕಳಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ವೇದಿಕೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸವಣೂರು ಪ್ರೌಢಶಾಲೆಯ ಶಿಕ್ಷಕ ಕಿಶಾನ್ ಬಿ.ವಿ. ಅವರು ತಂಬಾಕು ಸೇವನೆ ಮತ್ತು ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿದ್ದು ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾದ ವ್ಯಕ್ತಿ ಜೀವನಪೂರ್ತಿ ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ, ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಶ್ರೀಪತಿ ರಾವ್, ಶ್ರೀ ದುರ್ಗಾಂಬಾ ಪ್ರೌಢ ಶಾಲೆಯ ಮುಖ್ಯಗುರು ನವೀನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರೇಮ, ರೇಖಾ ಹಾಗೂ ಒಕ್ಕೂಟದ ಅಧ್ಯಕ್ಷ ಹರೀಶ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲೆ ರೂಪಾ ವಂದಿಸಿದರು. ಆಲಂಕಾರು ವಲಯ ಮೇಲ್ವಿಚಾರಕಿ ಲತಾ ಕಾರ್ಯಕ್ರಮ ನಿರೂಪಿಸಿದರು

 

Leave a Reply

error: Content is protected !!