ಇಚ್ಲಂಪಾಡಿ: ನೇರ್ಲ ಶಾಲೆಯಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳ ಶುಭಾರಂಭ

ಶೇರ್ ಮಾಡಿ

ಶಾಲಾ ಪ್ರಗತಿಗೆ ಸದಾ ನಮ್ಮ ಸಹಕಾರ – ಭಾಸ್ಕರ ಎಸ್. ಗೌಡ ಇಚ್ಲಂಪಾಡಿ

 

ಇಚ್ಲಂಪಾಡಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲಾಭಿವೃದ್ಧಿ ಸಮಿತಿ ಕೈಗೊಳ್ಳುತ್ತಿರುವ ಪ್ರಯತ್ನಗಳು ಶ್ಲಾಘನೀಯವಾಗಿದ್ದು, ಶಾಲೆಯ ಪ್ರತಿಯೊಂದು ಅಭಿವೃದ್ಧಿ ಕಾರ್ಯಕ್ಕೂ ತಾವು ಹಾಗೂ ಸಮಾಜದ ಎಲ್ಲರೂ ಸದಾ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ ಹೇಳಿದರು.

ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಎಲ್‌ಕೆಜಿ ಮತ್ತು ಯುಕೆಜಿ ನೂತನ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಕೆ.ಟಿ. ವಲ್ಸಮ್ಮ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿಯ ವಿಚಾರದಲ್ಲಿ ಎಲ್ಲರೂ ಒಂದಾಗಿ ಕೈಜೋಡಿಸಿದರೆ ಗ್ರಾಮೀಣ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕೌಕ್ರಾಡಿ ಗ್ರಾಮ ಪಂಚಾಯತ್ ಸದಸ್ಯೆ ಡೈಸಿ ವರ್ಗಿಸ್, ಕೆ.ಡಿ.ಪಿ ಸಮಿತಿ ಸದಸ್ಯ ಗಿರೀಶ್ ಸಾಲಿಯಾನ್, ಕಡಬ ಪಂಚ ಗ್ಯಾರಂಟಿ ಸಮಿತಿ ಸದಸ್ಯ ಸತೀಶ್ ಪಳಿಕೆ ಹಾಗೂ ನಿವೃತ್ತ ಮುಖ್ಯಶಿಕ್ಷಕಿ ಶಾಂತಿ ವಿ. ಭಟ್ ಅವರು ಶಾಲಾಭಿವೃದ್ಧಿ ಸಮಿತಿಯ ಕಾರ್ಯವನ್ನು ಶ್ಲಾಘಿಸಿ, ಶಾಲೆಯ ಸಮಗ್ರ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಪುಟ್ಟ ಮಕ್ಕಳಿಗೆ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಸಂತ ಬಿಜೇರು ಮಾತನಾಡಿ ಶಾಲೆಯ ಪ್ರಗತಿಗೆ ನಿರಂತರವಾಗಿ ಸಹಕಾರ ನೀಡುತ್ತಿರುವ ಅತಿಥಿಗಳು, ಗ್ರಾಮಸ್ಥರು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲೆಯ ಅಭಿವೃದ್ಧಿಗೆ ಸಮುದಾಯದ ಬೆಂಬಲವೇ ದೊಡ್ಡ ಶಕ್ತಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.

ಶಾಲಾ ಮುಖ್ಯಶಿಕ್ಷಕ ಡಾ.ಗಿರೀಶ್ ಹೆಚ್.ಎಂ. ಸ್ವಾಗತಿಸಿದರು. ಶಿಕ್ಷಕಿ ಆಥಿರಾ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಸೌಮ್ಯ ವಂದಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂತನ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಶುಭ ಕೋರಿದರು.

 

Leave a Reply

error: Content is protected !!