






ನೆಲ್ಯಾಡಿ: ವಿಶ್ವ ಪರಿಸರ ದಿನದ ಅಂಗವಾಗಿ ನೆಲ್ಯಾಡಿ ಜೆಸಿಐ ವತಿಯಿಂದ ಪುಚ್ಚೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮೂಡಿಸುವ ಉದ್ದೇಶದಿಂದ ಹಣ್ಣಿನ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷ ಪ್ರವೀಣಿ ಸುಧಾಕರ್ ಅವರು ಗಿಡವನ್ನು ನೆಟ್ಟು ಮಾತನಾಡಿ ಪರಿಸರದ ಸಮತೋಲನ ಕಾಪಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. ಶಾಲಾ ಮಕ್ಕಳಲ್ಲಿಯೂ ಪರಿಸರದ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಪರಿಣಾಮಕಾರಿ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಮುಖ್ಯಶಿಕ್ಷಕಿ ಗಿರಿಜಾ ಪಿ. ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪುರಂದರ ಗೌಡ ಡಿ., ಜಾಹ್ನವಿ, ಯೋಗೀಶ್, ದಿನೇಶ್ ಹಾಗೂರೋಹಿಣಿ ಸೇರಿದಂತೆ ಹಲವು ಗಣ್ಯರು ಮತ್ತು ಶಿಕ್ಷಕರು ಭಾಗವಹಿಸಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಕೈಜೋಡಿಸಿದರು.
ಶಾಲಾ ಆವರಣದಲ್ಲಿ ನೆಡಲಾದ ಹಣ್ಣಿನ ಗಿಡಗಳನ್ನು ಸಂರಕ್ಷಿಸಿ ಬೆಳೆಸುವ ಸಂಕಲ್ಪವನ್ನೂ ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು. ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡಗಳ ಆರೈಕೆಯ ಪ್ರತಿಜ್ಞೆ ಸ್ವೀಕರಿಸಿದರು.



