






ವಿಟ್ಲ: ಮಾಣಿ ಸಮೀಪದ ಗಡಿಯಾರದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಸಕಲೇಶಪುರ ಮೂಲದ ಲಕ್ಷ್ಮೀಕಾಂತ್ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ದರ್ಶನ್, ರಂಜಿತ್ ಹಾಗೂ ಶೋಭಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಪಲ್ಟಿಯಾದ ಕಾರಿನೊಳಗೆ ಸಿಲುಕಿದ್ದ ನಾಲ್ವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವ ಮಾನವೀಯ ಕಾರ್ಯ ನೆರವೇರಿಸಿದರು. ಆದರೆ ಚಾಲಕ ಲಕ್ಷ್ಮೀಕಾಂತ್ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ರಸ್ತೆ ವಿಭಾಜಕಕ್ಕೆ ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.



