ಕಡಬ: ಕೊಂಡಾಡಿಕೊಪ್ಪ ಶಾಲೆಯಲ್ಲಿ ಪರಿಸರ ಜಾಗೃತಿ ಹಾಗೂ ಗಿಡ ನೆಡುವ ಕಾರ್ಯಕ್ರಮ

ಶೇರ್ ಮಾಡಿ

 

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಲತಾ ಎಸ್. ವಹಿಸಿದ್ದರು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನೀರನ್ನು ಮಿತವಾಗಿ ಬಳಸುವ ಅಗತ್ಯತೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಯೋಜನೆಯ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಪರಿಸರ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಸಾಮಾಜಿಕ ಅರಣ್ಯೀಕರಣ, ಪರಿಸರ ಜಾಗೃತಿ ಅಭಿಯಾನಗಳು ಹಾಗೂ ಗಿಡ ನೆಡುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯ ಜಯಂತ್ ವೈ. ಮಾತನಾಡಿ, ಸರ್ಕಾರದ “ತಾಯಿ ಹೆಸರಲಿ ಒಂದು ಗಿಡ” ಯೋಜನೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಪರಿಸರ ಉಳಿಸುವ ಜವಾಬ್ದಾರಿ ನಮ್ಮ ಮನೆಯಿಂದಲೇ ಆರಂಭವಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯ ನಡೆಸಲಾಯಿತು. ಜೊತೆಗೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶೌರ್ಯ ಘಟಕದ ಪ್ರತಿನಿಧಿ ಸಂಯೋಜಕರು ಹಾಗೂ ಸ್ವಯಂಸೇವಕರು ಶಾಲಾ ಆವರಣದಲ್ಲಿ ಶ್ರಮದಾನ ನಡೆಸಿ ಸ್ವಚ್ಛತಾ ಕಾರ್ಯ ಕೈಗೊಂಡರು. ಇದೇ ವೇಳೆ ನೂತನ ಶೌರ್ಯ ಘಟಕದ ಪ್ರತಿನಿಧಿಯಾಗಿ ಹರೀಶ್ ಏಂತಡ್ಕ ಅವರನ್ನು ಆಯ್ಕೆ ಮಾಡಲಾಯಿತು.

ಶರವೂರು ಒಕ್ಕೂಟದ ಅಧ್ಯಕ್ಷೆ ವಾರಿಜ ಕೆ.ಸಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಂತೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸವಿತ ಸ್ವಾಗತಿಸಿದರು. ಅಲಂಕಾರ ವಲಯದ ಮೇಲ್ವಿಚಾರಕಿ ಲತಾ ನಿರೂಪಿಸಿದರು. ಕಡಬ ತಾಲೂಕು ಕೃಷಿ ಮೇಲ್ವಿಚಾರಕ ಸೋಮೇಶ್ ವಿ.ಎಂ. ವಂದಿಸಿದರು.

 

Leave a Reply

error: Content is protected !!