










ನೆಲ್ಯಾಡಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಪಾಲಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ವಿಶೇಷ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶಿಸಲಾಗಿದೆ. ಅಲ್ಲದೆ, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.



