










ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ 12ನೇ ತರಗತಿಯವರೆಗಿನ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ದೇಶಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಅಲ್ಲದೆ, ಪ್ರತಿಯೊಂದು ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿತ ಇಲಾಖೆಗಳಿಗೂ ಆದೇಶಿಸಲಾಗಿದೆ.
ಮಳೆ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದೆ.
ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.



