ಬಂಟ್ವಾಳ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮಚ್ಚಿನಿಂದ ಹಲ್ಲೆ; ಆರೋಪಿ ಠಾಣೆಗೆ ಶರಣು

ಶೇರ್ ಮಾಡಿ

 

ಬಂಟ್ವಾಳ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮಚ್ಚಿನಿಂದ ಹಲ್ಲೆ

ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಆತಂಕಕಾರಿ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ನಡೆದಿದೆ.

ಸೋಮವಾರದಂದು ಬೆಳಿಗ್ಗೆ ಸುಮಾರು 8.45 ಗಂಟೆಗೆ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ, ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್(28) ಎಂಬಾತ ಸ್ಥಳಕ್ಕೆ ಬಂದು ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಮಾಹಿತಿಯಂತೆ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿರವಾಗಿದೆ.

ಕೃತ್ಯ ಎಸಗಿದ ಬಳಿಕ ಆರೋಪಿ ನೇರವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಹಲ್ಲೆಯ ಹಿಂದಿನ ಕಾರಣ ಸೇರಿದಂತೆ ಎಲ್ಲ ಆಯಾಮಗಳ ಕುರಿತು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

error: Content is protected !!