










ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಜಂಕ್ಷನ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ ತೆರಳಿ, ಅಲ್ಲಿಂದ ಸಂಜೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲಾಯಿಲ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಏಕಾಏಕಿ ಸ್ಕಿಡ್ ಆಗಿ ರಸ್ತೆಗೆ ಉರುಳಿದೆ. ಪರಿಣಾಮ ಬೈಕಿನ ಹಿಂಬದಿ ಸವಾರ, ಮಂಗಳೂರು ನಿವಾಸಿ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಧೀರಜ್ (23) ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಸವಾರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿದ್ದ ಗುಂಡಿಗೆ ಬೈಕ್ ಬಿದ್ದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೇ ವೇಳೆ ಅಪರಿಚಿತ ವಾಹನವೊಂದು ಧೀರಜ್ ಅವರ ತಲೆಯ ಮೇಲೆ ಹರಿದು ಹೋಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ತಿಳಿಯಬೇಕಿದೆ.
ಈ ನಡುವೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಎಚ್ಚರಿಕೆ ಸೂಚನಾ ಫಲಕಗಳನ್ನು ಸಮರ್ಪಕವಾಗಿ ಅಳವಡಿಸದೇ ಇರುವುದು, ರಸ್ತೆ ಗುಂಡಿಗಳನ್ನು ಮುಚ್ಚದೇ ನಿರ್ಲಕ್ಷ್ಯ ವಹಿಸಿರುವುದು ಹಾಗೂ ರಾತ್ರಿ ವೇಳೆ ವಾಹನ ಸವಾರರಿಗೆ ಅಪಾಯ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಇಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



