










ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಜುಲೈ 8ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿತೀರ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಮಕ್ಕಳು ನೀರು ತುಂಬಿರುವ ಪ್ರದೇಶಗಳಿಗೆ ಹೋಗದಂತೆ ಪಾಲಕರು ವಿಶೇಷ ನಿಗಾ ವಹಿಸುವಂತೆ ಮನವಿ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಹ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚುರುಕಾಗಿ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ. ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ನೆರವು ಹಾಗೂ ಮಾಹಿತಿಗಾಗಿ ಜಿಲ್ಲಾಡಳಿತದ ಉಚಿತ ಸಹಾಯವಾಣಿ 1077 ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.



