










ನೆಲ್ಯಾಡಿ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಹೊಸಮನೆ ಎಂಬಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
ಮೃತರನ್ನು ಹೊಸಮನೆ ನಿವಾಸಿ ಸೋಮಶೇಖರ್ ಹೆಚ್.(27) ಎಂದು ಗುರುತಿಸಲಾಗಿದೆ. ಸೋಮಶೇಖರ್ ಅವರು ಮನೆಯವರೊಂದಿಗೆ ಆಗಾಗ ಗಲಾಟೆ ನಡೆಸುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಕೂಡ ತಂದೆ, ತಾಯಿ ಹಾಗೂ ಸಹೋದರಿಯರೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಮನೆಯವರು ಮಲಗಿದ ನಂತರ ಅವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಮುಂಜಾನೆ ಸುಮಾರು 1 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ, ಮನೆಯ ಮಲಗುವ ಕೋಣೆಯಲ್ಲಿದ್ದ ಮರದ ಅಡ್ಡಕ್ಕೆ ಬೈರಾಸು ಕಟ್ಟಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಬೈರಾಸು ತುಂಡಾಗಿ ಅವರು ಕೆಳಗೆ ಬಿದ್ದಿದ್ದು, ನೆಲದಲ್ಲಿದ್ದ ಒಡೆದ ಗಾಜಿನ ಚೂರುಗಳ ಮೇಲೆ ಕವುಚಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಮನೆಯವರು ಹಾಗೂ ಸ್ಥಳೀಯರ ಸಹಾಯದಿಂದ ಅಂಬುಲೆನ್ಸ್ ಮೂಲಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಮೃತರ ತಂದೆ ಗಣಪಯ್ಯ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.



