ರೈನ್‌ಕೋಟ್ ಮತ್ತು ಆನೆಯ ಹೆಜ್ಜೆ ಗುರುತು ಕಂಡು ಅನುಮಾನ – ಹುಡುಕಾಟದ ವೇಳೆ ಕಣಿಯಲ್ಲಿ ಮೃತದೇಹ ಪತ್ತೆ










ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.
ಈ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದವು. ಇದರಿಂದ ಕಾಡಾನೆ ದಾಳಿ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.
ಅನುಮಾನದ ಮೇರೆಗೆ ಸ್ಥಳೀಯರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಾಹಿತಿ ನಿರೀಕ್ಷಿಸಲಾಗುತ್ತಿದೆ.



