









ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮುಚ್ಚಿರಡ್ಕ ಸಮೀಪ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕೃಷಿ ಕಾರ್ಮಿಕ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಶಾಸಕ ಹರೀಶ್ ಪೂಂಜ ಅವರು ಭಾನುವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾಗಿರುವ ಒಟ್ಟು ರೂ.20 ಲಕ್ಷ ಪರಿಹಾರ ಧನದ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿದ ಶಾಸಕ ಹರೀಶ್ ಪೂಂಜ, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು. ಉಳಿದ ರೂ.15 ಲಕ್ಷ ಪರಿಹಾರವನ್ನು ಅಗತ್ಯ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಮೃತರ ವಾರಸುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಡಾನೆ ದಾಳಿಯಿಂದ ಅಮಾಯಕ ಜೀವ ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿ. ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ರೀತಿಯ ನೆರವು ಹಾಗೂ ಸೌಲಭ್ಯಗಳನ್ನು ಯಾವುದೇ ವಿಳಂಬವಿಲ್ಲದೆ ಒದಗಿಸಬೇಕು ಎಂದು ಶಾಸಕ ಹರೀಶ್ ಪೂಂಜ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಾಸಕ ಹರೀಶ್ ಪೂಂಜ, ಮಂಗಳೂರು ವಿಭಾಗದ ಡಿಎಫ್‌ಒ ರವಿಶಂಕರ ಸಿ., ಎಸಿಎಫ್ ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ತಹಶೀಲ್ದಾರ್ ಎಸ್.ಎನ್. ನರಗುಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಹಾಗೂ ಗ್ರಾಮ ಆಡಳಿತ ಅಧಿಕಾರಿ ವಿಜೇತ್, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ನವೀನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.



