







ನೆಲ್ಯಾಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ಹಾಗೂ ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪುತ್ತೂರು ಇದರ ಸ್ಪೆಷಲ್ ಕೇಸ್ ನಂ.5023/2025ರ ವಾರಂಟ್ ವ್ಯಕ್ತಿಯಾಗಿದ್ದ ಕೌಕ್ರಾಡಿ ಕಾಪಿನಬಾಗಿಲು ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ ಎಚ್.ಇ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ ನೆಲ್ಯಾಡಿ ಹೊರಠಾಣೆ ಸಿಬ್ಬಂದಿ ದಯಾನಂದ ಹಾಗೂ ರವಿರಾಜ್ ಅವರು ಕಾರ್ಯಾಚರಣೆ ನಡೆಸಿ ರಮೇಶ್ನನ್ನು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪುತ್ತೂರು ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.









































































































