




ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನವಿಕಾಸ ಕೇಂದ್ರದ ಸದಸ್ಯೆ ಸರಸ್ವತಿ ವಹಿಸಿ ಮಾತನಾಡಿದ ಅವರು ಜ್ಞಾನವಿಕಾಸ ಕೇಂದ್ರಕ್ಕೆ ತಿಂಗಳಿಗೆ ಒಂದು ದಿನ ಆಗಮಿಸುವುದರಿಂದ ಮಹಿಳೆಯರು ತಮ್ಮ ಕಷ್ಟ, ನೋವುಗಳನ್ನು ಮರೆತು ಸಂತಸದಿಂದ ಸಮಯ ಕಳೆಯಲು ಸಾಧ್ಯವಾಗುತ್ತಿದೆ. ಎಲ್ಲರೂ ಜ್ಞಾನವಿಕಾಸ ಕೇಂದ್ರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಊರಿನ ಗಣ್ಯರು ಹಾಗೂ ದೈವನರ್ತಕರಾದ ಕಿಟ್ಟು ಅಜಿಲ ಮಾತನಾಡಿ ಹಿಂದಿನ ಕಾಲದಲ್ಲಿ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಸೀಮಿತರಾಗಿದ್ದರು. ಹೊಲ-ಗದ್ದೆಗಳ ಕೆಲಸ ಬಿಟ್ಟರೆ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಚ್ಚಿನ ಅವಕಾಶವಿರಲಿಲ್ಲ. ಪ್ರತಿಯೊಬ್ಬರಲ್ಲೂ ಯಾವುದಾದರೊಂದು ಕಲೆ ಮತ್ತು ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರತರುವುದಕ್ಕೆ ವೇದಿಕೆ ಕಲ್ಪಿಸುವ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಜತೆಗೆ ಜ್ಞಾನದ ಅರಿವು ಮೂಡಿಸುವ ಕಾರ್ಯವನ್ನು ಮಾತೃಶ್ರೀ ಹೇಮಾವತಿ ಅಮ್ಮನವರು ಮಾಡುತ್ತಿದ್ದಾರೆ ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮದಲ್ಲಿ ಹಿರಿಯರು, ಕಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಂಡಿರುವುದು ಶ್ಲಾಘನೀಯ. ಸದಸ್ಯರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಜತೆಗೆ ತಮ್ಮಲ್ಲಾಗಿರುವ ಬದಲಾವಣೆಯನ್ನು ವಿವಿಧ ಚಟುವಟಿಕೆಗಳ ಮೂಲಕ ಪ್ರತಿಬಿಂಬಿಸಿದ್ದಾರೆ. ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಬೇಕೆಂಬ ಹಂಬಲ ಸದಸ್ಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಅದೇ ಉತ್ಸಾಹವನ್ನು ಜೀವನದಲ್ಲಿಯೂ ಅಳವಡಿಸಿಕೊಂಡು ಯಶಸ್ಸು ಸಾಧಿಸಬೇಕು. ಮಾತೃಶ್ರೀ ಅಮ್ಮನವರ ಕನಸನ್ನು ಎಲ್ಲರೂ ಸೇರಿ ನನಸು ಮಾಡುತ್ತಿದ್ದಾರೆ ಎಂದು ಹೇಳಿದರು. ಬಳಿಕ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ಸದಸ್ಯರನ್ನು ಅಭಿನಂದಿಸಿದರು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಅವರ ನೇತೃತ್ವದಲ್ಲಿ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಅಪರ್ಣ ಕಾರ್ಯಕ್ರಮವನ್ನು ಸಂಯೋಜಿಸಿದರು. ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ರಚಿತಾ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ಸ್ವಾಗತಿಸಿದರು. ಆಶಿಕಾ ವಂದಿಸಿದರು. ಒಕ್ಕೂಟದ ಪದಾಧಿಕಾರಿಗಳು ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.









































































































