




ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ಹಿಂದಕ್ಕೆ 3 ಸಾವಿರಕ್ಕೂ ಅಧಿಕ ಬಾರಿ ಚಲಿಸುವ ಮೂಲಕ ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಸೆ.26ರಂದು ಕಾಲೇಜಿನ ಸಭಾಂಗಣದಲ್ಲಿ ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯ ಮುಖ್ಯಸ್ಥ ಡಾ.ಮನೀಷ್ ವೈಷ್ಣವ್ ಅವರ ಸಮ್ಮುಖದಲ್ಲಿ ರಕ್ಷಾ ಅವರು ಈ ದಾಖಲೆಯ ಪ್ರದರ್ಶನ ನೀಡಿದರು. ಸಾಧನೆಗಾಗಿ ಸಂಸ್ಥೆಯ ವತಿಯಿಂದ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ರಕ್ಷಾ ಅವರನ್ನು ಪುರಸ್ಕರಿಸಲಾಯಿತು.
ಕಾರ್ಯಕ್ರಮವನ್ನು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ ಉದ್ಘಾಟಿಸಿ ರಕ್ಷಾ ಅವರ ಸಾಧನೆಗೆ ಶುಭ ಹಾರೈಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಜಯವಿಕ್ರಮ ಕಲ್ಲಾಪು ಹಾಗೂ ಉಷಾ ಅಂಚನ್ ನೆಲ್ಯಾಡಿ ಶುಭ ಹಾರೈಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಕಡಬ ತಾಲೂಕು ಅಧ್ಯಕ್ಷ ಸತೀಶ್ ಕೆ. ಐತ್ತೂರು, ರಾಮಕುಂಜ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಆರ್.ಕೆ., ಸುಚೇತಾ ಬರೆಂಬೆಟ್ಟು, ಮಾಲತಿ ಕದ್ರ, ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕೋಶಾಧಿಕಾರಿ ಕೆ. ಸೇಸಪ್ಪ ರೈ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಕೊಯಿಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾಗೂ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ದಾಮ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಚಂದ್ರಶೇಖರ ಕೆ. ಸ್ವಾಗತಿಸಿದರು. ಉಪನ್ಯಾಸಕ ಸುಬ್ರಹ್ಮಣ್ಯ ಕಾರಂತ್ ವಂದಿಸಿದರು. ಉಪನ್ಯಾಸಕಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು.









































































































