






ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಸಹಾನಿ ಬಿ. 100 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು. 7ನೇ ತರಗತಿಯ ಶನುಮ್ ಅಕ್ತರ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 7ನೇ ತರಗತಿಯ ನಜ ಫಾತಿಮಾ ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಗಳಿಸಿದರು. ಈ ಸಾಧನೆಯೊಂದಿಗೆ ಇಂದ್ರಪ್ರಸ್ಥ ವಿದ್ಯಾಲಯದ ಬಾಲಕಿಯರ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ಸನ್ಮಿತ್ ಉದ್ದ ಜಿಗಿತದಲ್ಲಿ ದ್ವಿತೀಯ ಹಾಗೂ 7ನೇ ತರಗತಿಯ ಚಂದಸ್ ಜಿ. ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದರು. 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಮುಹಮ್ಮದ್ ಸೈಫುಲ್ಲಾ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದರು. ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಈ ಎಲ್ಲಾ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕಿ ವೀಣಾ ಆರ್. ಪ್ರಸಾದ್ ತಿಳಿಸಿದ್ದಾರೆ.








































































































