9ರ ಹರೆಯದಲ್ಲೇ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ







ನೆಲ್ಯಾಡಿ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿಯ 9 ವರ್ಷದ ಬಾಲಕ ಮಹಮ್ಮದ್ ಇಶಾಮ್ ಚಿನ್ನದ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. ಪುಣೆಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 32 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಮಹಮ್ಮದ್ ಇಶಾಮ್, ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕಿರಿಯ ವಯಸ್ಸಿನಲ್ಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಸಾಧನೆ ಮಾಡುವ ಮೂಲಕ ಅವರು ಊರಿಗೆ, ಜಿಲ್ಲೆಗೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇಶಾಮ್ ಅವರು ಈ ಹಿಂದೆಯೂ ಕರಾಟೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ, ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹಾಗೂ ಮುಂಬೈನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಚಿನ್ನದ ಪದಕ ಗೆಲ್ಲುವ ಮೂಲಕ ತಮ್ಮ ಪ್ರತಿಭೆ ಹಾಗೂ ಪರಿಶ್ರಮವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಮಹಮ್ಮದ್ ಇಶಾಮ್ ಅವರು ಹಾಜಿ ಕೆ.ಕೆ. ಇಸ್ಮಾಯಿಲ್ ಕೋಲ್ಪೆ ಮತ್ತು ರಮ್ಜೀನ ದಂಪತಿಯ ಪ್ರಥಮ ಪುತ್ರರಾಗಿದ್ದು, ನೆಲ್ಯಾಡಿ ಜ್ಞಾನೋದಯ ಬೆಥನಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.








































































































