ಗೋಳಿತ್ತೊಟ್ಟು ವಲಯದ ಒಕ್ಕೂಟಗಳ ಪದಗ್ರಹಣ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ವಿದ್ಯಾರ್ಥಿಗಳಿಗೆ ಸುಜ್ಞಾನ ಶಿಷ್ಯ ವೇತನ, ಜ್ಞಾನದೀಪ ಶಿಕ್ಷಕಿಗೆ ಮಂಜೂರಾತಿ ಪತ್ರ ವಿತರಣೆ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗೋಳಿತ್ತೊಟ್ಟು ವಲಯ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗೋಳಿತ್ತೊಟ್ಟು ಇವುಗಳ ಸಹಯೋಗದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.11ರಂದು ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾ ಮಂದಿರದಲ್ಲಿ ನಡೆಯಿತು.
ಬೆಳಗ್ಗೆ ಪುರೋಹಿತ ಶ್ರೀವತ್ಸ ಅವರ ನೇತೃತ್ವದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ನೆರವೇರಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ತೆಂಗಿನ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಯೋಜನೆಯು ಕೇವಲ ಸಾಲ ನೀಡುವುದಕ್ಕೆ ಸೀಮಿತವಾಗದೆ, ರೈತರು ಸೇರಿದಂತೆ ಗ್ರಾಮೀಣ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗಿದೆ. ಜನಜಾಗೃತಿ ವೇದಿಕೆಯ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೂ ಪ್ರಯತ್ನಿಸಲಾಗುತ್ತಿದ್ದು, ಮನೆಗಳಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್ ಕುಮಾರ್ ಪಾಲೇರಿ ಅವರು ದೀಪ ಪ್ರಜ್ವಲಿಸಿ ಮಾತನಾಡಿ, ಹಿಂದೆ ಸಾಲ ಪಡೆಯಲು ದಾಖಲೆಗಳನ್ನು ಸಲ್ಲಿಸಿ ಸಾಲ ಮೇಳಗಳಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬ್ಯಾಂಕಿಂಗ್ ವ್ಯವಹಾರಗಳು ಜನರ ನಡುವಿನ ನಂಬಿಕೆ ಮತ್ತು ವಿಶ್ವಾಸಕ್ಕೆ ಮಹತ್ವ ನೀಡುತ್ತವೆ. ದೇವರ ಮೇಲಿನ ಭಯಭಕ್ತಿ ಹಾಗೂ ಧಾರ್ಮಿಕ ಆಚರಣೆಗಳ ಮೂಲಕ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಉಳಿಸಿ ಬೆಳೆಸಲು ಸಾಧ್ಯವಿದೆ ಎಂದರು.
ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿದ ಶ್ರೀbಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯೂ ಶಕ್ತಿಯಾಗಿ ಬೆಳೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬ ದೂರದೃಷ್ಟಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮಾಭಿವೃದ್ಧಿ ಯೋಜನೆಯನ್ನು ಆರಂಭಿಸಿದರು. ರಾಜ್ಯದಲ್ಲಿ ಸುಮಾರು 6.15 ಲಕ್ಷ ಸ್ವಸಹಾಯ ಸಂಘಗಳಿದ್ದು, ಅವುಗಳ ಮೂಲಕ ಸುಮಾರು 4,500 ಕೋಟಿ ರೂ. ಉಳಿತಾಯವಾಗಿದೆ. ಯೋಜನೆಯು ರಾಜ್ಯದ 22 ಸಾವಿರ ಹಳ್ಳಿಗಳಿಗೆ ವಿಸ್ತರಿಸಿದೆ. ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಗ್ರಾಮಾಭಿವೃದ್ಧಿ ಕಾರ್ಯಗಳ ಮೂಲಕ ಸಾಕಾರಗೊಳ್ಳುತ್ತಿದೆ. ಒಕ್ಕೂಟದ ಪದಾಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಲಿತಾ ಜಿ.ಡಿ. ಅವರು ಸುಜ್ಞಾನ ಶಿಷ್ಯ ವೇತನದ ಮಂಜೂರಾತಿ ಪತ್ರಗಳನ್ನು ವಿತರಿಸಿದರು.ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಅನಿಲ ಶುಭಹಾರೈಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಗೋಳಿತ್ತೊಟ್ಟು ವಲಯಾಧ್ಯಕ್ಷ ಬಾಲಕೃಷ್ಣ ಅಲೆಕ್ಕಿ ಅಧ್ಯಕ್ಷತೆ ವಹಿಸಿದ್ದರು. ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮಹೇಶ್ ಪಿ., ಗೋಳಿತ್ತೊಟ್ಟು ವಲಯ ಭಜನಾ ಪರಿಷತ್ ಅಧ್ಯಕ್ಷ ಲಿತಿನ್ ಕುಮಾರ್, ಗೋಳಿತ್ತೊಟ್ಟು ವಲಯ ಶೌರ್ಯ ವಿಪತ್ತು ಘಟಕದ ಅಧ್ಯಕ್ಷ ಜನಾರ್ದನ ಪೂಜಾರಿ, ಹಳೆನೇರೆಂಕಿ ಒಕ್ಕೂಟದ ಅಧ್ಯಕ್ಷೆ ಸವಿತಾ ಕೆ.ಎಚ್., ತಿರ್ಲೆ ಒಕ್ಕೂಟದ ಅಧ್ಯಕ್ಷ ಸೀತಾರಾಮ ಮಡಿವಾಳ ಅಗರ್ತ, ಆಲಂತಾಯ ಒಕ್ಕೂಟದ ಅಧ್ಯಕ್ಷ ಅಶೋಕ ಸಿ.ಬಿ. ಪಾಲೇರಿ ಹಾಗೂ ರಾಮಕುಂಜ ಎ ಒಕ್ಕೂಟದ ಅಧ್ಯಕ್ಷ ರಮೇಶ ಕುಂಡಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲಿತಿನ್ ಕುಮಾರ್ ಪ್ರಾರ್ಥಿಸಿದರು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕೆ. ಸ್ವಾಗತಿಸಿ, ಗ್ರಾಮಾಭಿವೃದ್ಧಿ ಯೋಜನೆಯ ನಡೆದುಬಂದ ಹಾದಿಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಳಿತ್ತೊಟ್ಟು ವಲಯ ಮೇಲ್ವಿಚಾರಕಿ ಸುಜಾತ ವರದಿ ಮಂಡಿಸಿದರು. ಸ್ವಸಹಾಯ ಸಂಘದ ಸದಸ್ಯೆ ಶ್ವೇತಾ ವಂದಿಸಿದರು. ಮೇಲ್ವಿಚಾರಕ ರವಿಪ್ರಸಾದ್ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನೂತನ ಪದಾಧಿಕಾರಿಗಳ ಪದಗ್ರಹಣ; ವಿವಿಧ ಸೌಲಭ್ಯಗಳ ವಿತರಣೆ ಗೋಳಿತ್ತೊಟ್ಟು ವಲಯದ ಗೋಳಿತ್ತೊಟ್ಟು, ಕೊಣಾಲು, ತಿರ್ಲೆ, ಹಳೆನೇರೆಂಕಿ, ಶಾಂತಿನಗರ, ಆಲಂತಾಯ ಹಾಗೂ ರಾಮಕುಂಜ ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಹಿಂದಿನ ಪದಾಧಿಕಾರಿಗಳು ವೀಳ್ಯ ಹಾಗೂ ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿತು.ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಸುಜ್ಞಾನ ಶಿಷ್ಯ ವೇತನದ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಶಾಂತಿನಗರ ಶಾಲೆಗೆ ನೇಮಕಗೊಂಡ ಜ್ಞಾನದೀಪ ಶಿಕ್ಷಕಿಗೆ ಮಂಜೂರಾತಿ ಪತ್ರ ನೀಡಲಾಯಿತು. ಜನಮಂಗಳ ಯೋಜನೆಯಡಿ ಶೀನಪ್ಪ ಪೂಜಾರಿ ಅವರಿಗೆ ವ್ಹೀಲ್ ಚೇರ್ ಹಸ್ತಾಂತರಿಸಲಾಯಿತು.ಇದಲ್ಲದೆ, ಗ್ರಾಮಾಭಿವೃದ್ಧಿ ಯೋಜನೆಯು ಪುತ್ತೂರು ತಾಲೂಕಿನಲ್ಲಿ ಆರಂಭಗೊಂಡು 24 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಯೋಜನೆಯ ಆರಂಭದಿಂದ ಈವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಸ್ವಸಹಾಯ ಸಂಘಗಳ ಸದಸ್ಯರನ್ನು ಶಾಲು ಹೊದಿಸಿ ಗೌರವಿಸಲಾಯಿತು.