ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲು ರೈತರಿಗೆ ಸಲಹೆ







ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ತೋಟಗಾರಿಕೆ ಬೆಳೆಗಳ ಅವಕಾಶಗಳು ಮತ್ತು ಬೇಸಾಯ ತಾಂತ್ರಿಕತೆಗಳ ಕುರಿತು ರೈತರಿಗೆ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ತಾಂತ್ರಿಕ ಅಧಿಕಾರಿ ಸಾಯಿನಾಥ್ ಅವರು ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿರುವ ವಿವಿಧ ಅವಕಾಶಗಳು, ಸೂಕ್ತ ಬೆಳೆಗಳ ಆಯ್ಕೆ, ಆಧುನಿಕ ಬೇಸಾಯ ಪದ್ಧತಿಗಳು ಹಾಗೂ ಕೃಷಿಯಲ್ಲಿ ಅಳವಡಿಸಿಕೊಳ್ಳಬಹುದಾದ ತಾಂತ್ರಿಕ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವೈಜ್ಞಾನಿಕ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಸುವುದರಿಂದ ಉತ್ಪಾದಕತೆಯನ್ನು ಹೆಚ್ಚಿಸುವುದರ ಜತೆಗೆ ರೈತರು ತಮ್ಮ ಆದಾಯವನ್ನೂ ಹೆಚ್ಚಿಸಿಕೊಳ್ಳಬಹುದು. ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡಿಕೊಂಡು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಬಹುದು ಎಂದು ಅವರು ವಿವರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಸೋಮೇಶ್ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಕೃಷಿ ವಿಸ್ತರಣಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ರೈತರು ಯೋಜನೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಗೆ ಸಂಬಂಧಿಸಿದ ನೂತನ ಮಾಹಿತಿ ಹಾಗೂ ವೈಜ್ಞಾನಿಕ ವಿಧಾನಗಳನ್ನು ತಿಳಿದುಕೊಂಡು ಕೃಷಿ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸೇವಾಪ್ರತಿನಿಧಿ ನಮಿತಾ ಶೆಟ್ಟಿ ಉಪಸ್ಥಿತರಿದ್ದರು. ರೈತರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು.
ಕುಸುಮ ಸ್ವಾಗತಿಸಿ, ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಬೇಬಿ ವಂದಿಸಿದರು.








































































































