






ಗುಂಡ್ಯ: ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ ಸಾರ್ವಜನಿಕ ಆಡಳಿತದ 25 ವರ್ಷಗಳ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಒಂದು ತಿಂಗಳ ಸೇವಾ ಚಟುವಟಿಕೆಯ ಅಂಗವಾಗಿ 2047 ವಿಕಸಿತ ಭಾರತ ಸಂಕಲ್ಪಕ್ಕಾಗಿ ಸೇವಾ ಪಾಕ್ಷಿಕದ ಪ್ರಯುಕ್ತ ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಸೋಮವಾರ ಗುಂಡ್ಯದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೀದಿ ನಾಟಕದ ಮೊದಲ ಪ್ರದರ್ಶನವೂ ನಡೆಯಿತು.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದ ಮೂಲಕ ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಹಾಗೂ ಪರಿಶ್ರಮದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶ ಹೊಂದಲಾಗಿದೆ. ಬೀದಿ ನಾಟಕದ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ, ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸುವಂತೆ ಪ್ರೇರೇಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಗುಂಡ್ಯದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ದ.ಕ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್. ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ಪ್ರಸನ್ನ ಮಾರ್ತ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ವಿನಯ್ ಕಂದಡ್ಕ, ವಿಕಾಸ್ ಪುತ್ತೂರು, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸೇರಿದಂತೆ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಹಿತೈಷಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.








































































































