






ನೆಲ್ಯಾಡಿ: ಶ್ರೀ ಕ್ಷೇತ್ರ ಅಮ್ಮಾಜೆಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.20ರವರೆಗೆ ನವರಾತ್ರಿ ಪೂಜಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನೂ ಮಾಡಲಾಗಿದೆ.
ನವರಾತ್ರಿಯ ದಿನಗಳಲ್ಲಿ ಪ್ರತಿದಿನ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ 7.30ರಿಂದ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಲಿದ್ದು, ರಾತ್ರಿ 8.30ರಿಂದ ನವರಾತ್ರಿ ಪೂಜೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಅ.19ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ಗಣಹೋಮ, 11.30ಕ್ಕೆ ಗೋಪೂಜೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಲಿದೆ. ಸಂಜೆ 4 ಗಂಟೆಗೆ ಆಯುಧ ಪೂಜೆ ನಡೆಯಲಿದ್ದು, ರಾತ್ರಿ 10 ಗಂಟೆಗೆ ಮಹಾರಂಗಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ.
ಅ.20ರಂದು ಬೆಳಿಗ್ಗೆ 11 ಗಂಟೆಯಿಂದ ಅಕ್ಷರಾಭ್ಯಾಸ, ನವಕ ಕಲಶ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಬಯಸುವ ಪೋಷಕರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.
ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಅಧ್ಯಕ್ಷರು ಹಾಗೂ ವ್ಯವಸ್ಥಾಪನಾ ಸಮಿತಿಯ ಸರ್ವ ಸದಸ್ಯರು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.








































































































