






ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನದ ಸಮೀಪ ಹೂವಿನ ವ್ಯಾಪಾರದ ಅಂಗಡಿ ವಿಚಾರವಾಗಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.
ಮೊದಲ ಪ್ರಕರಣ: ಕೊಕ್ಕಡ ನಿವಾಸಿ ಕೃಷ್ಣ ಭಟ್ ಅವರು ನೀಡಿದ ದೂರಿನ ಪ್ರಕಾರ, ಅ. 18ರಂದು ಬೆಳಿಗ್ಗೆ ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ರಾಘವ ಭಂಡಾರಿ ಹಾಗೂ ಅವರ ಕೆಲಸಗಾರರು ವ್ಯಾಪಾರ ಮಾಡುತ್ತಿದ್ದ ವೇಳೆ, ಈ ಹಿಂದೆ ಆ ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ ದಾಂಧಲೆ ನಡೆಸಿ ಸುಮಾರು 25 ಸಾವಿರ ರೂ. ಮೌಲ್ಯದ ಕಟ್ಟಡ ಹಾಗೂ ಇತರ ಸ್ವತ್ತುಗಳಿಗೆ ಹಾನಿ ಮಾಡಲಾಗಿದ್ದು, ರಾಘವ ಭಂಡಾರಿ ಮತ್ತು ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡನೇ ಪ್ರಕರಣ: ಸೌತಡ್ಕ ದೇವಸ್ಥಾನದ ಸಮೀಪದ ಅಂಗಡಿಯಲ್ಲಿ ಹರಿಶ್ಚಂದ್ರ ಅವರು ವ್ಯಾಪಾರ ಮಾಡುತ್ತಿದ್ದ ವೇಳೆ, ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್ ಹಾಗೂ ಚೇತನ್ ಎಂಬವರು ಅಕ್ರಮವಾಗಿ ಅಂಗಡಿಗೆ ಪ್ರವೇಶಿಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹೊರಗೆ ಎಸೆದು ಹಾನಿ ಮಾಡಿದ್ದಾರೆ ಎಂದು ಹರಿಶ್ಚಂದ್ರ ಅವರ ಪತ್ನಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








































































































