




ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್(61) ಪ್ರಕರಣದ ಆರೋಪಿಯಾಗಿದ್ದಾನೆ.
ಪೊಲೀಸ್ ಪ್ರಕಟಣೆಯ ಪ್ರಕಾರ, ಸಂತ್ರಸ್ತ ಯುವತಿಯು ಅ.24ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಆರೋಪಿಯು ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದ್ದಾರೆ.








































































































