


ನೆಲ್ಯಾಡಿ: ವಿದ್ಯಾನಗರದಲ್ಲಿ ಯು-ಟರ್ನ್ ನಿರ್ಮಿಸಬೇಕೆಂಬ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಪಡೆಯುವ ನಿಟ್ಟಿನಲ್ಲಿ ನೆಲ್ಯಾಡಿ ಯು-ಟರ್ನ್ ಹೋರಾಟ ಸಮಿತಿಯ ನಿಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕರ್ನಾಟಕ ವಿಭಾಗದ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ. ಬ್ರಹ್ಮಂಕರ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ನೆಲ್ಯಾಡಿಯ ವಿದ್ಯಾನಗರ ಭಾಗದಲ್ಲಿ ಯು-ಟರ್ನ್ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಮುಖ್ಯ ರಸ್ತೆಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲು ಸೂಕ್ತ ವ್ಯವಸ್ಥೆ ಇಲ್ಲದೆ ವಾಹನ ಸವಾರರು ಅನಿವಾರ್ಯವಾಗಿ ದೂರದವರೆಗೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾನಗರ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳು, ವಸತಿ ಪ್ರದೇಶಗಳು ಹಾಗೂ ವಿವಿಧ ವಾಣಿಜ್ಯ ಚಟುವಟಿಕೆಗಳು ಇರುವುದರಿಂದ ಪ್ರತಿದಿನ ನೂರಾರು ಸಾರ್ವಜನಿಕರು ಈ ರಸ್ತೆಯನ್ನು ಅವಲಂಬಿಸಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರ ಹಿತದೃಷ್ಟಿಯಿಂದ ಇಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ ಎಂದು ಸಮಿತಿಯ ಸದಸ್ಯರು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಸಾರ್ವಜನಿಕರ ಸುರಕ್ಷತೆ, ವಾಹನ ಸಂಚಾರದ ಅನುಕೂಲ ಹಾಗೂ ಸ್ಥಳೀಯರ ದೈನಂದಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾನಗರದಲ್ಲಿ ಯು-ಟರ್ನ್ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು. ಈ ಬಗ್ಗೆ ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯ ನಿಯೋಗ ಮನವಿ ಸಲ್ಲಿಸಿತು.
ಸಮಿತಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಾದೇಶಿಕ ಅಧಿಕಾರಿ ವಿ.ಪಿ. ಬ್ರಹ್ಮಂಕರ್ ಅವರು ಯು-ಟರ್ನ್ ಬೇಡಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸಂಚಾಲಕ ಇಕ್ಬಾಲ್, ಕಾರ್ಯದರ್ಶಿ ರಫೀಕ್ ಬೈಲು, ಉಪಾಧ್ಯಕ್ಷ ರವಿ ಅತ್ರಿಜಾಲು ಹಾಗೂ ಸದಸ್ಯರಾದ ಜೋಸ್, ನಾಝೀಮ್ ಸಾಹೇಬ್ ಮತ್ತು ಪೌಲ್ ಡಿಸೋಜಾ ಉಪಸ್ಥಿತರಿದ್ದರು.








































































































