


ನೆಲ್ಯಾಡಿ: ಹೊಸಮಜಲು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಬಾಣಜಾಲು ಮಾತನಾಡಿ ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆ ಹಾಗೂ ನಮ್ಮ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿದೆ. ಕನ್ನಡ ಭಾಷೆ ಮತ್ತು ನಾಡಿನ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು, ನಿತ್ಯ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಕೈಜೋಡಿಸಬೇಕು. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಶಾಲೆಯ ಮುಖ್ಯಶಿಕ್ಷಕಿ ವೀಣಾ ಮಸ್ಕರೇನಸ್ ಮಾತನಾಡಿ ಕನ್ನಡ ರಾಜ್ಯೋತ್ಸವವು ಕನ್ನಡಿಗರ ಏಕತೆ, ಭಾಷಾಭಿಮಾನ ಹಾಗೂ ನಾಡಿನ ಗೌರವವನ್ನು ಸಾರುವ ಮಹತ್ವದ ದಿನವಾಗಿದೆ. ಕನ್ನಡ ಭಾಷೆಗೆ ತನ್ನದೇ ಆದ ಶ್ರೀಮಂತ ಇತಿಹಾಸ ಮತ್ತು ಸಾಹಿತ್ಯ ಪರಂಪರೆಯಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇತರ ಭಾಷೆಗಳನ್ನು ಗೌರವಿಸುತ್ತಲೇ ಮಾತೃಭಾಷೆಯಾದ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಅಜೀಜ್, ಸದಸ್ಯರಾದ ಅಜೀಜ್, ನೆಬಿಸಾ, ರುಕ್ಯ ಅಡುಗೆ ಸಿಬ್ಬಂದಿಗಳಾದ ಪುಷ್ಪ ಹಾಗೂ ನೆಬಿಜಾ, ಶಿಕ್ಷಕರಾದ ಸಾನಿಯಾ, ಪ್ರಿಯಾಂಕ, ಪುಷ್ಪ, ಚಿತ್ರಲೇಖಾ ಮತ್ತು ಸರಿತಾ, ವಿದ್ಯಾರ್ಥಿ ನಾಯಕ ಮಸೂರೂರ್, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.








































































































