


ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯಿಂದ ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತೆಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ಮನೆ ನಿವಾಸಿ ರಫೀಕ್ ಅವರ ಪತ್ನಿ ನಸೀಮಾ @ ನಸೀಮ (42) ಎಂದು ಗುರುತಿಸಲಾಗಿದೆ.
ನ.1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆಯ ವೇಳೆ ಆರೋಪಿತರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಸೀಮಾ ಎಂಬಾಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತು ಪೂರೈಕೆಯ ಜಾಲದ ಕುರಿತು ತನಿಖೆ ಕೈಗೊಂಡ ಪೊಲೀಸರು, ಆರೋಪಿತೆ ವಾಸವಿದ್ದ ಪಂಪ್ವೆಲ್ ಸಮೀಪದ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ನಂ.103ಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಫ್ಲ್ಯಾಟ್ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 153 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಅದರ ಅಂದಾಜು ಮೌಲ್ಯ ₹15.30 ಲಕ್ಷ ಎಂದು ತಿಳಿಸಲಾಗಿದೆ.
ವಿಚಾರಣೆ ವೇಳೆ ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮತ್ತು ಪೂರೈಕೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ಮಾದಕ ವಸ್ತು ಪೂರೈಕೆ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








































































































