


ನೆಲ್ಯಾಡಿ: ಆಲ್-ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ನಾಝಿಂ ಸಾಹೇಬ್ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆ, ಸೃಜನಶೀಲತೆ ಹಾಗೂ ಸುಪ್ತ ಸಾಮರ್ಥ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತ್ಯಂತ ಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು.
ಶಾಲೆಯ ಮುಖ್ಯಶಿಕ್ಷಕಿ ಸೀಮಾ ಅವರು ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ ಮಕ್ಕಳ ಸಂತೋಷ, ಬೆಳವಣಿಗೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಇಸ್ಮಾಯಿಲ್ ಉಪಸ್ಥಿತರಿದ್ದರು. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.
ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಆಟಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಶಿಕ್ಷಕಿ ಫಾಯಿಝಾ ಸ್ವಾಗತಿಸಿದರು. ಶಿಕ್ಷಕಿ ನಿಶಾ ಕಾರ್ಯಕ್ರಮ ನಿರೂಪಿಸಿದರು. ಸಹನಿಯ ವಂದಿಸಿದರು. ಶಿಕ್ಷಕಿಯರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.








































































































