ಸಂಘಟನೆಯ ಬಗ್ಗೆ ಅಪಸ್ವರಗಳಿಗೆ ಕಿವಿಗೊಡದೆ ಪ್ರಾಮಾಣಿಕತೆ ಮತ್ತು ಪರಿಶುದ್ಧತೆಯಿಂದ ಕಾರ್ಯನಿರ್ವಹಿಸಿ: ಕೃಷ್ಣ ಶೆಟ್ಟಿ ಕಡಬ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರ ಜೊತೆಗೆ ಸಂಸ್ಕಾರ, ಶಿಸ್ತು, ನೈತಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣದ ಮಹತ್ವದ ಕಾರ್ಯ ಮಾಡುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಡಬ ವಲಯ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಸಹಯೋಗದಲ್ಲಿ ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕಡಬದ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸುಮಾರು 25 ವರ್ಷಗಳ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯು ಈ ಪರಿಸರದಲ್ಲಿ ಕಾರ್ಯಾರಂಭಿಸಿದ ಸಂದರ್ಭದಲ್ಲಿ ಯೋಜನೆಯ ಪರಿಚಯ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ದಿನಗಳನ್ನು ಸ್ಮರಿಸಿದ ಅವರು, ಉಪ್ಪಿನಂಗಡಿಯ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಮಾಡಿದ ಮನವಿಯ ಹಿನ್ನೆಲೆಯಲ್ಲಿ ಕಡಬ ಹಾಗೂ ಪುತ್ತೂರು ತಾಲೂಕುಗಳಲ್ಲಿ ಯೋಜನೆಯ ಸಂಘಟನಾ ಕಾರ್ಯ ವಿಸ್ತರಣೆಯಾಯಿತು ಎಂದರು.
ಕಳೆದ ಎರಡೂವರೆ ದಶಕಗಳಲ್ಲಿ ಜನರ ಜೀವನಶೈಲಿ, ಆರ್ಥಿಕ ಪರಿಸ್ಥಿತಿ, ವ್ಯವಹಾರಗಳು, ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಯ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯ ನಿರಂತರ ಸೇವೆ ಮತ್ತು ಸಂಘಟನಾ ಪ್ರಯತ್ನಗಳ ದೊಡ್ಡ ಕೊಡುಗೆಯಿದೆ. ಯೋಜನೆಯು ವ್ಯಕ್ತಿಯ ಆರ್ಥಿಕ ಸಬಲೀಕರಣದ ಜೊತೆಗೆ ದುಶ್ಚಟಗಳಿಂದ ದೂರವಿರುವ ಜೀವನ, ಮಕ್ಕಳಿಗೆ ಉತ್ತಮ ಶಿಕ್ಷಣ, ಕುಟುಂಬದಲ್ಲಿ ಸಂಸ್ಕಾರ, ಪರಿಸರ ಸ್ವಚ್ಛತೆ, ಭಜನಾ ಸಂಸ್ಕೃತಿಯ ಬೆಳವಣಿಗೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೂ ಆದ್ಯತೆ ನೀಡುತ್ತಿದೆ. ಮದ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಉತ್ತಮ ಜೀವನಮೌಲ್ಯಗಳನ್ನು ಬೆಳೆಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ಕೇವಲ ಆರ್ಥಿಕ ಅಭಿವೃದ್ಧಿಯಿಂದ ಸಾಕಾರಗೊಳ್ಳಲು ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಮಾನವೀಯತೆ, ಸಹೋದರತೆ, ಪರಸ್ಪರ ಗೌರವ ಹಾಗೂ ಸಂಸ್ಕಾರ ಬೆಳೆಯಬೇಕು. ಪ್ರತಿಯೊಬ್ಬರೂ ತಮ್ಮ ಧರ್ಮ ಮತ್ತು ನಂಬಿಕೆಗಳನ್ನು ಗೌರವಿಸುತ್ತಾ ಸಹಬಾಳ್ವೆಯಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇಂತಹ ಸುದೃಢ ಸಮಾಜ ನಿರ್ಮಾಣದ ಉದ್ದೇಶದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕೆಲವು ಕಡೆ ಸಂಘಟನೆ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ಅಪಸ್ವರಗಳು ಕೇಳಿಬರುತ್ತಿವೆ. ಇಂತಹ ಅಪಪ್ರಚಾರಗಳಿಗೆ ಕಿವಿಗೊಡದೆ, ಸಂಘಟನೆಯ ಉದ್ದೇಶ ಹಾಗೂ ಸಮಾಜದಲ್ಲಿ ಅದು ತಂದಿರುವ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳಬೇಕು. ಸಂಘಟನೆಯ ವ್ಯವಹಾರಗಳಲ್ಲಿ ಪ್ರಾಮಾಣಿಕತೆ ಮತ್ತು ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಸದಸ್ಯನ ಜವಾಬ್ದಾರಿಯಾಗಿದೆ. ನಮ್ಮ ನಡವಳಿಕೆಯಿಂದ ಸಂಘಟನೆಗೆ ಕೆಟ್ಟ ಹೆಸರು ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಹೊರಜಗತ್ತಿನಲ್ಲಿ ತನ್ನದೇ ಆದ ಸಂಸ್ಕಾರಯುತ ಸಮಾಜದ ಗೌರವವಿದೆ. ಆ ಗೌರವಕ್ಕೆ ಚ್ಯುತಿ ಬಾರದಂತೆ ನಮ್ಮ ನಡೆನುಡಿಗಳು ಇರಬೇಕು. ಗ್ರಾಮಾಭಿವೃದ್ಧಿ ಯೋಜನೆಯ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತಾ ಸಂಘಟನೆಯ ಪ್ರತಿಯೊಂದು ಚಟುವಟಿಕೆಯಲ್ಲಿ ಮುಕ್ತ ಮನಸ್ಸಿನಿಂದ ಪಾಲ್ಗೊಂಡು ಅದರ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ವಿನಂತಿಸಿದರು.
ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮ್ಮನ್ನ ಜಬೀನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಹುದ್ದೆ ಎನ್ನುವುದು ಕೇವಲ ಗೌರವವಲ್ಲ, ಅದೊಂದು ಮಹತ್ವದ ಜವಾಬ್ದಾರಿ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಂಘಟನೆಯ ಅಭಿವೃದ್ಧಿಗಾಗಿ ಪ್ರಾಮಾಣಿಕತೆ, ನಿಷ್ಠೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಸಾಮರಸ್ಯ, ಒಗ್ಗಟ್ಟು ಹಾಗೂ ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಇಂತಹ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಕಡಬ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ರಮೇಶ್ ರೈ ಅರ್ಪಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ಕಡಬ ಶ್ರೀ ಶ್ರೀಕಂಠಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಹರೀಶ್ ರೈ ಹಳ್ಳಿ, ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಆನಂದ ಅಜಿಲ, ಒರುಂಬಾಳು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಭಿಲಾಷ್ ಪಿ.ಕೆ., ಪಿಜಕ್ಕಳದ ಪ್ರಗತಿಪರ ಕೃಷಿಕ ಪಿ. ಅರುಣ್ ಕುಮಾರ್ ಕಂಗುಳೆ, ಬಲ್ಯದ ಪ್ರಗತಿಪರ ಕೃಷಿಕ ಬಿ.ಎಂ. ಪೂರ್ಣೇಶ್ ಗೌಡ ಬಾಟ್ಲುಬೆಟ್ಟು, ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ಮೈಲೇರಿ, ಕಡಬ ವಲಯ ಭಜನಾ ಪರಿಷತ್ ಅಧ್ಯಕ್ಷ ರಮೇಶ್ ಅಡೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಧನಂಜಯ ಎಚ್. ಹಾಗೂ ವಿವಿಧ ಒಕ್ಕೂಟಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ನಿರ್ಗಮಿತ ಪದಾಧಿಕಾರಿಗಳಿಗೆ ಕ್ಷೇತ್ರದ ಉಡುಗೊರೆಯಾಗಿ ಬ್ಯಾಗ್ ವಿತರಿಸಲಾಯಿತು. ಕಡಬ ವಲಯದಲ್ಲಿ ಶ್ರಮವಿನಿಮಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಂಘಗಳನ್ನು ಹಾಗೂ ಅತಿಹೆಚ್ಚು ಪ್ರಗತಿನಿಧಿ ಪಡೆದ ಐದು ಸ್ವಸಹಾಯ ಸಂಘಗಳನ್ನು ಗುರುತಿಸಿ ಗೌರವಿಸಲಾಯಿತು. ವಲಯದ ಅತ್ಯುತ್ತಮ ಒಕ್ಕೂಟವಾಗಿ ನೂಜಿಬಾಳ್ತಿಲ ಒಕ್ಕೂಟವನ್ನು ಗುರುತಿಸಲಾಯಿತು. ಪದಗ್ರಹಣ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ಆರಂಭದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ವಂದಿಸಿದರು. ರವಿಪ್ರಸಾದ್ ಅಲಾಜೆ ಕಾರ್ಯಕ್ರಮ ನಿರೂಪಿಸಿದರು.